ಮಲೆನಾಡು • ಸ್ಥಳೀಯ ಸುದ್ದಿ • ಕನ್ನಡದ ಧ್ವನಿ ಪ್ರತಿಬಿಂಬ
ನಮ್ಮ ಊರಿನ ಸುದ್ದಿ — ನಮ್ಮ ಧ್ವನಿ
ತಾಜಾ ಸುದ್ದಿ
ಪ್ರತಿಬಿಂಬಕ್ಕೆ ಸ್ವಾಗತ • ಸ್ಥಳೀಯ ಮತ್ತು ಮಲೆನಾಡಿನ ಸುದ್ದಿಗಳನ್ನು ವೇಗವಾಗಿ ಓದಿ

ರೈತರಿಗೆ ಪರಿಹಾರ ಕಲ್ಪಿಸಲು ನಿಖರ ವರದಿ ನೀಡಿ: ಶಾಸಕ ಆರಗ ಜ್ಞಾನೇಂದ್ರ ಹೊಸನಗರ ತಾಲೂಕನ್ನೂ ಶೀಘ್ರದಲ್ಲೇ ಬರಪೀಡಿತ ಎಂದು ಘೋಷಿಸುವ ವಿಶ್ವಾಸ



ತೀರ್ಥಹಳ್ಳಿ: ಮಳೆಯ ಕೊರತೆಯಿಂದ ಭತ್ತದ ಗದ್ದೆಗಳು ಹಾಗೂ ಅಡಿಕೆ ತೋಟಗಳು ಒಣಗುತ್ತಿದ್ದು, ರೈತರಲ್ಲಿ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳು ನಿಖರ ವರದಿ ಸಲ್ಲಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.
ವಿಶೇಷ ಅಧಿವೇಶನದ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ವಿಶೇಷ ಅಧಿವೇಶನದಲ್ಲಿ ಸರ್ಕಾರಕ್ಕೆ ಆಗ್ರಹಿಸಲಾಗುತ್ತು. ಅದರಂತೆ ತೀರ್ಥಹಳ್ಳಿ ತಾಲೂಕನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಹೊಸನಗರ ತಾಲೂಕನ್ನು ಬರಪೀಡಿತ ಎಂದು ಘೋಷಿಸುವ ಸಂಬಂಧವೂ ವರದಿ ಸಲ್ಲಿಕೆಯಾಗಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗುವ ವಿಶ್ವಾಸವಿದೆ ಎಂದು ಶಾಸಕರು ತಿಳಿಸಿದ್ದಾರೆ.
ಬೇಸಿಗೆಯ ದಿನಗಳು ಮುಂದಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಪೂರೈಕೆ ಸಮರ್ಪಕವಾಗಿರದಿದ್ದರೆ ಕುಡಿಯುವ ನೀರು ಹಾಗೂ ಕೃಷಿ ಜಮೀನುಗಳಿಗೆ ನೀರು ಒದಗಿಸುವುದು ಕಷ್ಟವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಏತ ನೀರಾವರಿ ಯೋಜನೆಗಳ ನಿರ್ವಹಣೆಯನ್ನು ಸುಧಾರಿಸಿ, ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವ ಹಾಗೂ ಕೃಷಿ ಜಮೀನುಗಳಿಗೆ ನೀರು ಪೂರೈಸುವ ಕಾರ್ಯಕ್ಕೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದ್ದಾರೆ.
ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಇಂಧನ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಖರ ವರದಿಗಳೊಂದಿಗೆ ಬರ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.